ಚಾಮರಾಜನಗರ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ರಾಜ್ಯ ಮಟ್ಟದ ಕುರುಬರ ಸಂಘದ ಚಾಮರಾಜನಗರ ಜಿಲ್ಲಾಧ್ಯಕ್ಷರಾದ ಬಿ.ಎಸ್. ಶಶಿಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಎ.ಆರ್. ಕೃಷ್ಣಮೂರ್ತಿ ಅವರು ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಹಿಂದುಳಿದ ಹಾಗೂ ದಲಿತ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಅವರ ರಾಜಕೀಯ ಹಿರಿತನ ಮತ್ತು ಪಕ್ಷಕ್ಕೆ ನೀಡಿರುವ ಕೊಡುಗೆಯನ್ನು ಗಮನ ಹರಿಸಿ, ಅವರಿಗೆ ತಕ್ಷಣವೇ ಸಚಿವ ಸ್ಥಾನದ ಜವಾಬ್ದಾರಿ ನೀಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

”ಕೃಷ್ಣಮೂರ್ತಿ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಚಾಮರಾಜನಗರ ಜಿಲ್ಲೆ ಹಾಗೂ ಹಳೇ ಮೈಸೂರು ಭಾಗದಲ್ಲಿ ಪಕ್ಷದ ಸಂಘಟನೆಗೆ ಮತ್ತಷ್ಟು ಶಕ್ತಿ ಬರಲಿದೆ. ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಠರು ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು.”— ಬಿ.ಎಸ್. ಶಶಿಕುಮಾರ್
ಚಾಮರಾಜನಗರ ಜಿಲ್ಲೆಯ ಸಮಗ್ರ ಪ್ರಗತಿ ಮತ್ತು ಜಿಲ್ಲೆಗೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ಸಿಗುವ ದೃಷ್ಟಿಯಿಂದ ಈ ತೀರ್ಮಾನ ಅತ್ಯಗತ್ಯವಾಗಿದೆ. ಹೈಕಮಾಂಡ್ ತಕ್ಷಣವೇ ಈ ನಿಟ್ಟಿನಲ್ಲಿ ಸಕಾರಾತ್ಮಕ ಕ್ರಮ ಕೈಗೊಂಡು ಜಿಲ್ಲೆಯ ಜನತೆಗೆ ನ್ಯಾಯ ಒದಗಿಸಬೇಕು ಎಂದು ಶಶಿಕುಮಾರ್ ಬಿ.ಎಸ್. ಆಗ್ರಹಿಸಿದ್ದಾರೆ.

