Headlines

ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಪೋಸ್ಟ್ ಹಾಗೂ ಪ್ರಚೋದನಕಾರಿ ಹೇಳಿಕೆ: ಕಾನೂನು ಕ್ರಮದ ಎಚ್ಚರಿಕೆ ನೀಡಿದ ಚಾಮರಾಜನಗರ ಎಸ್ಪಿ

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ

ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಪದಬಳಕೆ, ಕೋಮು ಸೌಹಾರ್ದತೆಗೆ ಧಕ್ಕೆ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ಪೋಸ್ಟ್ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮುತ್ತುರಾಜು ಎಂ. ಅವರು ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

​ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಕಾಮೆಂಟ್ ಮಾಡಿದ್ದ ಹಿನ್ನೆಲೆಯಲ್ಲಿ, ಕೊಳ್ಳೆಗಾಲ ಪೊಲೀಸರು ದೂರು ದಾಖಲಿಸಿಕೊಂಡು ಓರ್ವ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದರ ಬೆನ್ನಲ್ಲೇ ಯಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಸಣಾಪುರ ಗ್ರಾಮದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಎರಡೂ ಕಡೆಯವರಿಂದ ಪ್ರಕರಣಗಳು ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಆದರೆ, ಈ ವಿಚಾರವನ್ನು ಮುಂದಿಟ್ಟುಕೊಂಡು ಕೆಲವು ವ್ಯಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಮತ್ತು ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದೆ. ಈ ಸಂಬಂಧ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ಮತ್ತೊಬ್ಬ ಆರೋಪಿಯನ್ನೂ ಸಹ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

​ಜಿಲ್ಲೆಯ ಕಾನೂನು ಸುವ್ಯವಸ್ಥೆ ಮತ್ತು ಸಾಮಾಜಿಕ ಸಾಮರಸ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ತೀವ್ರ ನಿಗಾ ವಹಿಸಿದೆ. ಜಿಲ್ಲಾ ಪೊಲೀಸ್ ಕಚೇರಿ ಸೇರಿದಂತೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿರುವ ‘ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್’ (Social Media Monitoring Cell) ಮೂಲಕ ಫೇಸ್‌ಬುಕ್, ಎಕ್ಸ್ (ಟ್ವಿಟರ್), ವಾಟ್ಸಾಪ್ ಸೇರಿದಂತೆ ವಿವಿಧ ಜಾಲತಾಣಗಳ ಮೇಲೆ ನಿರಂತರ ನಿಗಾ ಇರಿಸಲಾಗಿದೆ. ಸಮಾಜದಲ್ಲಿ ಶಾಂತಿ ಕದಡುವ ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಪೋಸ್ಟ್‌ಗಳು ಕಂಡುಬಂದಲ್ಲಿ, ಪೊಲೀಸರೇ ಸ್ವಯಂಪ್ರೇರಿತರಾಗಿ (ಸುಮೋಟೊ) ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!