ಬೆಂಗಳೂರು: ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಜನಪ್ರತಿನಿಧಿಗಳ ಗೌರವಕ್ಕೆ ಧಕ್ಕೆ ತಂದು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ ಎನ್ನಲಾದ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಾಗೂ ಸಂಸ್ಥೆಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಒಳಾಡಳಿತ ಇಲಾಖೆ ಸೂಚಿಸಿದೆ. ಈ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಿ, ಸರಕಾರಕ್ಕೆ ವರದಿ ಸಲ್ಲಿಸುವಂತೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಎಂ.ಎ. ಸಲೀಂ ಅವರಿಗೆ ಅಧಿಕೃತ ಪತ್ರ ಬರೆದಿದ್ದಾರೆ.
ಪ್ರಕರಣದ ಹಿನ್ನೆಲೆ:
ಸಚಿವರು, ಆಡಳಿತ ಪಕ್ಷದ ಶಾಸಕರು ಮತ್ತು ಪ್ರತಿಪಕ್ಷದ ಶಾಸಕರಿಗೆ ಹಣದ ಆಮಿಷವೊಡ್ಡಿ ಅಪರಾಧಕ್ಕೆ ಪ್ರಚೋದಿಸುವ ಮೂಲಕ ಸ್ಟಿಂಗ್ ಆಪರೇಷನ್ ನಡೆಸಲಾಗುತ್ತಿದೆ. ಈ ಮೂಲಕ ಜನಪ್ರತಿನಿಧಿಗಳ ತೇಜೋವಧೆ ಮಾಡಿ ಬ್ಲ್ಯಾಕ್ಮೇಲ್ ಮಾಡಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ಬಾಬು ಅವರು ಇತ್ತೀಚೆಗೆ ಸರಕಾರಕ್ಕೆ ಪತ್ರ ಬರೆದಿದ್ದರು.
ಸುರೇಶ್ಬಾಬು ಅವರ ಮನವಿಯನ್ನು ಗಂಭೀರವಾಗಿ ಪರಿಗಣಿಸಿರುವ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳನ್ನು ನಿಯಮಾನುಸಾರ ಪರಿಶೀಲಿಸಿ ರಾಕೇಶ್ ಶೆಟ್ಟಿ ಮತ್ತು ಸುದ್ದಿವಾಹಿನಿಯ ನೌಕರರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಂಡು ವರದಿ ನೀಡುವಂತೆ ಡಿಜಿಪಿಗೆ ನಿರ್ದೇಶನ ನೀಡಿದ್ದಾರೆ.
