Headlines

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಲು ಕೋರ್ಟ್ ಮಹತ್ವದ ಸೂಚನೆ

ಬೆಂಗಳೂರು, ಜುಲೈ 15: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪತ್ನಿ ಬಿ.ಎಂ.ಪಾರ್ವತಿ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ತನಿಖಾ ಸ್ಥಿತಿಗತಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ.

ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ (ಜು.15) ಖಾಸಗಿ ದೂರು ವಿಚಾರಣೆ ನಡೆಯಿತು. ವಿಚಾರಣೆಗೂ ಮುನ್ನ ಲೋಕಾಯುಕ್ತ ತನಿಖಾಧಿಕಾರಿ ಈವರೆಗಿನ ತನಿಖಾ ಪ್ರಗತಿ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದರು.

ಈ ವೇಳೆ, ದೂರುದಾರ ಸ್ನೇಹಮಯಿ ಕೃಷ್ಣ ಅವರು, “ತಾವು ಸಲ್ಲಿಸಿದ ದಾಖಲೆಗಳನ್ನು ಲೋಕಾಯುಕ್ತ ಪೊಲೀಸರು ಪರಿಗಣಿಸಿಲ್ಲ. ದಾಖಲೆ ಪರಿಗಣಿಸದೇ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಅವರ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ಹೀಗಾಗಿ ತನಿಖಾಧಿಕಾರಿ ವಿರುದ್ಧ ಕ್ರಮ ಕೋರಿರುವ ಅರ್ಜಿಗಳನ್ನು ಪರಿಗಣಿಸಬೇಕು” ಎಂದು ಮನವಿ ಮಾಡಿದರು. ಎಲ್ಲ ದಾಖಲೆಗಳನ್ನು ಪರಿಗಣಿಸಲಾಗಿದೆ ಎಂದು ಲೋಕಾಯುಕ್ತ ಎಸ್​ಪಿಪಿ ಪೀಠಕ್ಕೆ ತಿಳಿಸಿದರು. ನ್ಯಾಯಾಲಯ ಜುಲೈ 28ರಂದು ತನಿಖಾ ಸ್ಥಿತಿಗತಿ ವರದಿ ಸಲ್ಲಿಸಲು ಸೂಚನೆ ನೀಡಿತು.

ಬಿ. ರಿಪೋರ್ಟ್​ ಸಲ್ಲಿಸಿದ್ದ ಲೋಕಾಯುಕ್ತ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತ ತನಿಖೆಗೆ ಹೈಕೋರ್ಟ್​ ಏಕ ಸದಸ್ಯ ಪೀಠ ಆದೇಶ ನೀಡಿತ್ತು. ಹಗರಣದ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ, ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ, ಸಂಬಂಧಿ ಹಾಗೂ ಜಮೀನು ಮಾಲೀಕರು ಅಕ್ರಮ ಎಸಗಿರುವ ಬಗ್ಗೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ ಎಂದು ನ್ಯಾಯಾಲಾಯಕ್ಕೆ ಬಿ ರಿಪೋರ್ಟ್​ ಸಲ್ಲಿಸಿದ್ದರು. ಈ ರಿಪೋರ್ಟ್​ ಅನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಸಿಬಿಐಗೆ ನೀಡುವಂತೆ ದೂರುದಾರ ಮನವಿ
ಅಲ್ಲದೆ, ದೂರುದಾರ ಸ್ನೇಹಮಯಿ ಕೃಷ್ಣ ಅವರು ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಹೈಕೋರ್ಟನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಹಗರಣ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಸರಿಯಾಗಿ ನೆಡಸಿಲ್ಲ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!