Headlines

ಭೂಒತ್ತುವರಿ ಆರೋಪ: ನ್ಯಾಯಾಂಗ ನಿಂದನೆ ಕೇಸ್ ನಲ್ಲಿ ಕೇಂದ್ರ ಸಚಿವ ಎಚ್.ಡಿ.ಕೆ.ಗೆ ರಿಲೀಫ್

ನವದೆಹಲಿ, ಜುಲೈ 17: ಬಿಡದಿ ಬಳಿ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ಕರ್ನಾಟಕ ಹೈಕೋರ್ಟ್​ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಂಕಜ್ ಮಿಥಲ್ ಹಾಗೂ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರ ದ್ವಿಸದಸ್ಯ ಪೀಠ, ಮುಂದಿನ ಆದೇಶದವರೆಗೂ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ.

ಹಿಂದಿನ ರಾಮನಗರ ಜಿಲ್ಲೆ ಬಿಡದಿ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ. ತಮ್ಮಣ್ಣ ಮತ್ತಿತರರ ವಿರುದ್ಧದ ಭೂ ಕಬಳಿಕೆ ಆರೋಪ ಸಂಬಂಧ ಲೋಕಾಯುಕ್ತ ನೀಡಿರುವ ಆದೇಶ ಜಾರಿಗೊಳಿಸುವಲ್ಲಿ ರಾಜ್ಯಸರಕಾರ ವಿಫಲವಾಗಿದೆ ಎಂದು ಆಕ್ಷೇಪಿಸಿ ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್‌ ಹಿರೇಮಠ ಅವರು ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಈ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಅರ್ಜಿ ವಿಚಾರಣೆಯಲ್ಲಿ ಭಾಗವಹಿಸಲು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿಗೆ ಅನುಮತಿ ನೀಡಿತ್ತು. ಆದ್ರೆ, ಹೈಕೋರ್ಟ್​ ನ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಬಾಕಿ ಇರುವುದರಿಂದ ತಮ್ಮ ವಿರುದ್ಧದ ಕಾನೂನು ಪ್ರಕ್ರಿಯೆಗೆ ತಡೆ ನೀಡುವಂತೆ ಕುಮಾರಸ್ವಾಮಿ ಹೈಕೋರ್ಟ್‌ಗೆ ಮನವಿ ಮಾಡಿದ್ದರು. ಕುಮಾರಸ್ವಾಮಿ ಅವರ ಮನವಿ ಪರಿಗಣಿಸಿದ ನ್ಯಾಯಾಲಯ, ಮಾರ್ಚ್ 27 ರವರೆಗೂ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಆದೇಶಿಸಿ ವಿಚಾರಣೆಯನ್ನು ಮುಂದೂಡಿತ್ತು. ಆದರೆ ಇದೀಗ ಸುಪ್ರೀಂಕೋರ್ಟ್, ಕುಮಾರಸ್ವಾಮಿ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಗೆ ತಡೆ ನೀಡಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ…
2014 ರಲ್ಲಿ ಬಿಡದಿ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ 8 ಸರ್ವೆ ನಂಬರ್‌ಗಳಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಲಾಗಿದ್ದು, ಈ ಒತ್ತುವರಿ ತೆರವಿಗೆ ಲೋಕಾಯುಕ್ತ ಸೂಚಿಸಿತ್ತು. ಲೋಕಾಯುಕ್ತದ ಸೂಚನೆ ಬಳಿಕವೂ ಅಧಿಕಾರಿಗಳು ತೆರವು ಮಾಡಲಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಮಾಜ ಪರಿವರ್ತನ ಸಮಾಜ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮೂರು ತಿಂಗಳಲ್ಲಿ ತೆರವು ಮಾಡಲು ಸೂಚನೆ ನೀಡಿತ್ತು. ಹೈಕೋರ್ಟ್ ಸೂಚನೆ ಬಳಿಕವೂ ತೆರವು ಮಾಡದ ಅಧಿಕಾರಿಗಳು ಈ ಹಿನ್ನೆಲೆ ಸಮಾಜ ಪರಿವರ್ತನಾ ಸಮಾಜ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಈ ನ್ಯಾಯಾಂಗ ನಿಂದನೆ ಅರ್ಜಿ ವಜಾ ಮಾಡಲು ಕುಮಾರಸ್ವಾಮಿ ಸುಪ್ರೀಂಕೋರ್ಟ್‌ಗೆ ಕೋರಿದ್ದರು.

Leave a Reply

Your email address will not be published. Required fields are marked *

error: Content is protected !!