Headlines

ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವರೊಂದಿಗೆ ಡಿಸಿಎಂ ಚರ್ಚೆ

ನವದೆಹಲಿ, ಜುಲೈ 8: ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಪಾಟೀಲ್‌ರ ಜೊತೆ ಸಭೆಯ ಬಳಿಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿಯಲ್ಲಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಹಿರಿಯ ಅಧಿಕಾರಿಗಳು ಹಾಗೂ ವಕೀಲರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.

ಕೃಷಿ ಸಚಿವ ಚೆಲುವರಾಯಸ್ವಾಮಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ಗುಪ್ತ ಸೇರಿದಂತೆ ಹಿರಿಯ ಅಧಿಕಾರಿಗಳು, ವಕೀಲರು, ತಂತ್ರಜ್ಞರು ಸಭೆಯಲ್ಲಿ ಉಪಸ್ಥಿತರಿದ್ದರು.
ಮೇಕೆದಾಟು, ಕಳಸಾ ಬಂಡೂರಿ, ಎತ್ತಿನಹೊಳೆ, ಕೃಷ್ಣಾ ಮೇಲ್ದಂಡೆ, ತುಂಗಭದ್ರಾ ಸೇರಿದಂತೆ ಹಲವಾರು ಯೋಜನೆಗಳ ಸ್ಥಿತಿಗತಿ ಹಾಗೂ ಕಾನೂನು ತೊಡಕುಗಳ ಬಗ್ಗೆ ಚರ್ಚೆ ನಡೆಸಲಾಗಿದೆ.

ಮೇಕೆದಾಟು ಹಾಗೂ ಕಳಸಾ ಬಂಡೂರಿ ಯೋಜನೆಗಳ ಆರಂಭಕ್ಕೆ ಕೇಂದ್ರ ಪರಿಸರ ಹಾಗೂ ಅರಣ್ಯ ಇಲಾಖೆಯ ಪೂರ್ವಾನುಮತಿ ಅಗತ್ಯವಿದ್ದು, ಕೇಂದ್ರ ಸರ್ಕಾರ ಬಯಸಿದ ಎಲ್ಲಾ ದಾಖಲಾತಿಗಳನ್ನು ಒದಗಿಸಿದ ನಂತರವೂ ಅನುಮತಿ ನೀಡಲು ವಿಳಂಬವಾಗುತ್ತಿರುವ ಬಗ್ಗೆ ಡಿ.ಕೆ.ಶಿವಕುಮಾರ್‌ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮತ್ತಷ್ಟು ಚರ್ಚೆಗಳನ್ನು ನಡೆಸಿ ಪೂರ್ವಾನುಮತಿಯನ್ನು ಶೀಘ್ರ ದೊರಕಿಸಿಕೊಡಲು ಅಗತ್ಯ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಅನಿವಾರ್ಯವಾದರೆ ಕಾನೂನಿನ ಹೋರಾಟಕ್ಕೂ ಮುಂದಾಗುವ ಸೂಚನೆ ನೀಡಲಾಗಿದೆ. ಎತ್ತಿನಹೊಳೆ ಯೋಜನೆಗಾಗಿ ತುಮಕೂರು ಮತ್ತು ಹಾಸನ ಜಿಲ್ಲೆಯಲ್ಲಿ ಅಡೆತಡೆಗಳು ಎದುರಾಗಿದ್ದು, ಇಲ್ಲಿಯೂ ಕೂಡ ಕೇಂದ್ರ, ಪರಿಸರ ಮತ್ತು ಅರಣ್ಯ ಇಲಾಖೆಯ ಪೂರ್ವಾನುಮತಿ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ದೆಹಲಿಯಲ್ಲಿರುವ ಅಧಿಕಾರಿಗಳು, ಈ ಬಗ್ಗೆ ಅನುಪಾಲನೆ ಮಾಡುವಂತೆ ಸಲಹೆ ನೀಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್‌ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳನ್ನು ಶೀಘ್ರ ಮಂಜೂರು ಮಾಡಿಸಲು ಮತ್ತಷ್ಟು ಒತ್ತಡ ಹೆಚ್ಚಿಸುವ ಅಗತ್ಯವಿದೆ. ಕೃಷ್ಣಾ ನ್ಯಾಯಾಧಿಕರಣದ ತೀರ್ಪನ್ನು ಶೀಘ್ರವಾಗಿ ಅಧಿಸೂಚನೆ ಹೊರಡಿಸಬೇಕು. ರಾಜ್ಯಸರ್ಕಾರ ತೀರ್ಪಿನ ಅನುಸಾರ ತನ್ನ ಪಾಲಿನ ನೀರನ್ನು ಬಳಕೆ ಮಾಡಿಕೊಂಡು ಆಲಮಟ್ಟಿ ಅಣೆಕಟ್ಟಿನ ಎತ್ತರ ಸೇರಿದಂತೆ ಇತರ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಸಿದ್ಧವಿದೆ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಉಳಿದಂತೆ ಹಲವಾರು ನೀರಾವರಿ ಯೋಜನೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದ್ದು, ತುಮಕೂರು ಜಿಲ್ಲೆಗೆ ಹೇಮಾವತಿ ಮೂಲಕ ಸಂಪೂರ್ಣ ನೀರಾವರಿ ಕಲ್ಪಿಸಲು ಕೈಗೊಳ್ಳಬೇಕಾದ ಯೋಜನೆಗಳ ಪ್ರಸ್ತಾವನೆ ಬಗ್ಗೆ ಸಭೆಯಲ್ಲಿ ಸಮಾಲೋಚಿಸಲಾಗಿದೆ. ಬಳಿಕ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳ ಜೊತೆ ಬಿಡಿಎ ವಿವಾದಗಳ, ಕಾನೂನು ಸಮರಗಳ ಬಗ್ಗೆ ಡಿ.ಕೆ.ಶಿವಕುಮಾರ್‌ ಪ್ರಗತಿ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *

error: Content is protected !!