Headlines

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮ ಜವಾಬ್ದಾರಿ: ರಮೇಶ್ ಬಂಡಿಸಿದ್ದೇಗೌಡ


ಮಂಡ್ಯ.ಸೆ.15:- 
ಭಾರತದ ದೇಶದಲ್ಲಿರುವ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅನುಸರಿಸುವುದರ ಜೊತೆಗೆ ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮ ಜವಾಬ್ದಾರಿ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಹೇಳಿದರು.

ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಜಾಪ್ರಭುತ್ವದ ಮಹತ್ವವನ್ನು ಸಾರುವ ದೃಷ್ಟಿಯಿಂದ ವಿಶ್ವಸಂಸ್ಥೆ ಜಗತ್ತಿನಾದ್ಯಂತ ಇಂದು ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸುತ್ತಿದೆ ಎಂದು ಹೇಳಿದರು.

ಅನೇಕ ಹಿರಿಯರು ಹೋರಾಟ ಮಾಡಿ, ಶ್ರಮ ಪಟ್ಟು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ನಮಗೆ ನೀಡಿದ್ದಾರೆ. ಜಗತ್ತಿನಲ್ಲೇ ಎಲ್ಲೂ ಇಲ್ಲದ ಪ್ರಜಾಪ್ರಭುತ್ವವನ್ನು ನಾವು ಹೊಂದಿದ್ದೇವೆ. ಶ್ರೀಲಂಕಾ, ಬಾಂಗ್ಲಾದೇಶ, ಆಫ್ಘಾನಿಸ್ತಾನ, ಇತ್ತೀಚೆಗೆ ನೇಪಾಳದಲ್ಲಿ ಉಂಟಾಗಿರುವ ಸಮಸ್ಯೆ ಎಲ್ಲರಿಗೂ ತಿಳಿದಿದೆ. ಇಡೀ ವಿಶ್ವದಲ್ಲಿ ಶಕ್ತಿಯನ್ನು ಹಾಗೂ ಸಾಮಾಜಿಕ ಬದ್ಧತೆಯನ್ನು ಕೊಟ್ಟಿರುವ ಯಾವುದಾದರೂ ಪ್ರಭುತ್ವ ಇದ್ದರೆ ಅದು ಭಾರತೀತ ಸಂವಿಧಾನ ಮಾತ್ರ ಎಂದು ಹರ್ಷ ವ್ಯಕ್ತಪಡಿಸಿದರು.

ನೆರೆ ರಾಷ್ಟ್ರಗಳಿಗೆ ಹೋದಾಗ ಮಾತ್ರ ನಮ್ಮ ರಾಷ್ಟ್ರದ ಪ್ರಜಾಪ್ರಭುತ್ವ ವ್ಯವಸ್ಥೆಯ ಕುರಿತು ಅರಿವು ಮೂಡುತ್ತದೆ. ದಿನನಿತ್ಯದ ಜೀವನದ ಜಂಜಾಟದ ನಡುವೆ ಪ್ರಜಾಪ್ರಭುತ್ವ ಮೇಲೆ ಇರಬೇಕಾದ ಸಾಮಾಜಿಕ ಕಳಕಳಿಯನ್ನು ಮರೆಯುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಮೇಲು-ಕೀಳು, ಬಡವ-ಶ್ರೀಮಂತ, ಮೇಲ್ಜಾತಿ -ಕೆಳಜಾತಿ ಎಂಬ ಮನೋಭಾವನೆ ಇಲ್ಲ. ಪ್ರಸ್ತುತ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಕಡೆಗಣಿಸು ನಿಟ್ಟಿನಲ್ಲಿ ಗಲಭೆಗಳು, ರಾಜಕಾರಣ, ದ್ವೇಷ ಭಾಷಣ ಮಾಡಲಾಗುತ್ತಿದೆ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ದೃಢಸಂಕಲ್ಪ ಮಾಡಿ ಪ್ರಾಮಾಣಿಕ ಹೋರಾಟ ಮಾಡುವ ಸ್ಥಿತಿ ಎದುರಾಗಿದೆ ಎಂದರು.

ಸಮಾಜದಲ್ಲಿ ಎಲ್ಲರೂ ಸಮಾರಸ್ಯದಿಂದ ಬದುಕಬೇಕು. ಕೆಟ್ಟ ವಾತಾವರಣವನ್ನು ಸಮಾಜದಲ್ಲಿ ಸೃಷ್ಠಿಸಬಾರದು. ಧರ್ಮದ ಆಧಾರದಲ್ಲಿ ಸಮಾಜ ಶಾಂತಿ ಹಾಳು ಮಾಡಬೇಡಿ. ನಾವೆಲ್ಲರೂ ಭಾರತಾಂಭೆಯ ಮಕ್ಕಳು. ನೆರೆ ರಾಷ್ಟ್ರಗಳಿಗೆ ಹೋಲಿಸಿದರೆ ನಾವು ಎಷ್ಟೊ ಉತ್ತಮವಾಗಿ ಸಮಾಜದಲ್ಲಿ ಬದುಕುತ್ತಿದ್ದೇವೆ ಎಂದು ತಿಳಿಯುತ್ತದೆ. ಸಂವಿಧಾನದ ಕುರಿತು ಮಕ್ಕಳಿಗೆ ಆಶುಭಾಷಣ, ಪ್ರಬಂಧ ಸ್ಪರ್ಧೆಗಳು ಅಯೋಜಿಸಬೇಕು ನಮ್ಮ ಮಕ್ಕಳಿಗೆ ಸಂವಿಧಾನ ಮಹತ್ವ ತಿಳಿಯಬೇಕು. ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ನಿಟ್ಟಿನಲ್ಲಿ ನಾವೆಲ್ಲರೂ ಮುಂದೆ ಸಾಗೋಣ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್, ಮುಖಂಡರುಗಳಾದ ವೆಂಕಟಗಿರಿಯ್ಯ, ಸಂದೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸೈಕಲ್ ಜಾಥಾ
ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಪ್ರಜಾಪ್ರಭುತ್ವದ ಮಹತ್ವದ ಕುರಿತು ಅರಿವು ಮೂಡಿಸಲು ಇಂದು ಬೆಳಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಂಭಾಗದಲ್ಲಿ ಸೈಕಲ್ ಜಾಥಾ ಆಯೋಜಿಸಲಾಗಿತ್ತು.

ಸೈಕಲ್ ಜಾಥಾದಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಸೈಕಲ್ ಜಾಥಾ ಕಾರ್ಯಕ್ರಮಕ್ಕೆ ಹಸಿರು ಬಾವುಟ ಪ್ರದರ್ಶಿಸುವ ಮೂಲಕ ಚಾಲನೆ ನೀಡಿದರು.

Leave a Reply

Your email address will not be published. Required fields are marked *

error: Content is protected !!