ಸಕಲೇಶಪುರ:ಇಲ್ಲಿನ ಸರ್ಕಾರಿ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಖಾಸಗಿ ಅಂಬುಲೆನ್ಸ್‌ಗಳ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿಸುವ ರೋಗಿಗಳು ಹಾಗೂ ಅವರ ಸಂಬಂಧಿಕರನ್ನು ಖಾಸಗಿ ಅಂಬುಲೆನ್ಸ್ ಚಾಲಕರು ಒತ್ತಾಯಪೂರ್ವಕವಾಗಿ ತಮ್ಮ ವಾಹನಗಳಲ್ಲಿ ಕರೆದೊಯ್ಯಲು ಯತ್ನಿಸುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ.
ಆಸ್ಪತ್ರೆಯ ಆವರಣದಲ್ಲಿಯೇ ಈ ರೀತಿಯ ಅಕ್ರಮ ಚಟುವಟಿಕೆಗಳು ಬಹಿರಂಗವಾಗಿ ನಡೆಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಶಂಕೆ
ಈ ಕಳವಳಕಾರಿ ವಿಚಾರವನ್ನು ಈಗಾಗಲೇ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದರೂ ಸಮಸ್ಯೆ ಬಗೆಹರಿದಿಲ್ಲ. ಅಷ್ಟೇ ಅಲ್ಲದೆ, ವಿಷಯವನ್ನು ಸಚಿವರ ಗಮನಕ್ಕೂ ತರಲಾಗಿದ್ದರೂ ಯಾವುದೇ ಪರಿಣಾಮಕಾರಿ ಕ್ರಮ ಜರುಗಿಸಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಕೆಲ ಖಾಸಗಿ ಅಂಬುಲೆನ್ಸ್ ಸಿಬ್ಬಂದಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯೊಂದಿಗೆ ಆವಾಚ್ಯವಾಗಿ ವರ್ತಿಸುತ್ತಿದ್ದು, ಆಸ್ಪತ್ರೆಯ ಆಡಳಿತದ ಮೇಲೆಯೇ ಪ್ರಭಾವ ಬೀರುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.
ಖಾಸಗಿ ಅಂಬುಲೆನ್ಸ್‌ಗಳ ಈ ಚಟುವಟಿಕೆಗಳಿಗೆ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಯಾವುದೇ ರೀತಿಯ ಬೆಂಬಲ ಅಥವಾ ಸಹಕಾರವಿದೆಯೇ ಎಂಬ ಸಂಶಯ ಸಾರ್ವಜನಿಕರಲ್ಲಿ ಮೂಡಿದೆ. ಈ ಕುರಿತು ಜಿಲ್ಲಾಡಳಿತವು ಸಮಗ್ರ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.
ತಕ್ಷಣದ ಕ್ರಮಕ್ಕೆ ಆಗ್ರಹ
ಸರ್ಕಾರಿ ಆಸ್ಪತ್ರೆಯಲ್ಲಿ ಬಡ ರೋಗಿಗಳ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಬೇಕಾಗಿದ್ದು, ಆಸ್ಪತ್ರೆ ಆವರಣದಲ್ಲಿ ಖಾಸಗಿ ಅಂಬುಲೆನ್ಸ್‌ಗಳ ಅನಧಿಕೃತ ಹಸ್ತಕ್ಷೇಪಕ್ಕೆ ತಕ್ಷಣವೇ ಕಡಿವಾಣ ಹಾಕಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹಾಗೂ ಖಾಸಗಿ ಅಂಬುಲೆನ್ಸ್‌ಗಳು ಆಸ್ಪತ್ರೆಯ ಒಳಗಡೆ ಮತ್ತು ಹೊರಗಡೆ ನಿಲ್ಲಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

