Headlines

ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಸಿಇಒ ಮೋನಾ ರೋತ್ ಅವರಿಂದ ಚಾಲನೆ

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ
ಚಾಮರಾಜನಗರ, ಡಿಸೆಂಬರ್ 21 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಇಂದು ಚಾಲನೆ ದೊರೆಯಿತು.

ಚಾಮರಾಜನಗರ ತಾಲೂಕಿನ ವೆಂಕಟಯ್ಯನಛತ್ರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಲಾಗಿದ್ದ ಪಲ್ಸ್ ಪೋಲಿಯೋ ಉದ್ಘಾಟನಾ ಸಮಾರಂಭವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿದರು.

ಬಳಿಕ ಮೋನಾ ರೋತ್ ಅವರು ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ವಿದ್ಯುಕ್ತವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ನಮ್ಮ ಅಕ್ಕಪಕ್ಕದ ದೇಶಗಳಲ್ಲಿ ಪೋಲಿಯೋ ಪ್ರಕರಣ ಕಾಣಿಸಿಕೊಂಡಿದೆ. ಹೀಗಾಗಿ ಈ ವೈರಸ್ ವಿರುದ್ದ ನಾವು ಮುನ್ನೆಚ್ಚರಿಕೆ ವಹಿಸಬೇಕಿದೆ. ಈ ಕಾರಣದಿಂದಲೇ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ವ್ಯಾಪಕವಾಗಿ ಹಮ್ಮಿಕೊಳ್ಳಲಾಗಿದೆ ಎಂದರು.

ಇಂದು ಬೂತ್ ಗಳಲ್ಲಿ ಪೋಲಿಯೋ ಲಸಿಕೆ ನೀಡಲಾಗುತ್ತಿದೆ. ನಾಳೆ, ನಾಳಿದ್ದು ಮನೆ ಮನೆಗೆ ಭೇಟಿ ನೀಡಿ ಲಸಿಕೆ ಹಾಕಲಾಗುತ್ತದೆ. ಇಂದು ಯಾವುದೇ ಮಕ್ಕಳಿಗೆ ಲಸಿಕೆ ಹಾಕಿಸದೇ ಇದ್ದಲ್ಲಿ ಮನೆ ಮನೆಗೆ ಭೇಟಿ ನೀಡುವ ವೇಳೆ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದ ಸಿಇಒ ಮೋನಾ ರೋತ್ ಅವರು ಈ ಮಹತ್ವದ ಕಾರ್ಯಕ್ಕೆ ವಿವಿಧ ಇಲಾಖೆಗಳು, ಸಂಘ ಸಂಸ್ಥೆಗಳು ಕೈಜೋಡಿಸಿವೆ. ಇದಕ್ಕಾಗಿ ಧನ್ಯವಾದಗಳನ್ನು ಅರ್ಪಿಸುವುದಾಗಿ ತಿಳಿಸಿದರು.

ಪ್ರಾಸ್ತವಿಕವಾಗಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ ಅವರು ಭಾರತದಲ್ಲಿ 2011ರಲ್ಲಿ ಪೋಲಿಯೋ ಪ್ರಕರಣ ಕಡೆಯದಾಗಿ ವರದಿಯಾಗಿತ್ತು. ಬಳಿಕ ಯಾವುದೇ ಪ್ರಕರಣಗಳು ವರದಿಯಾಗಿರಲಿಲ್ಲ. ವಿಶ್ವ ಆರೋಗ್ಯ ಸಂಸ್ಥೆ ಭಾರತವನ್ನು ಪೋಲಿಯೋ ಮುಕ್ತ ದೇಶವೆಂದು ಘೋಷಿಸಿತ್ತು. ಆದರೂ ನೆರೆಯ ರಾಷ್ಟ್ರಗಳಲ್ಲಿ ಕೆಲವು ಪೋಲಿಯೋ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಕಾರಾಣಾಂತರಗಳಿಂದ ಮಕ್ಕಳಿಗೆ ಬೂತ್ ಗಳಲ್ಲಿ ಲಸಿಕೆ ಹಾಕಿಸಲು ಸಾಧ್ಯವಾಗದಿದ್ದಲ್ಲಿ ಮನೆ ಮನೆಗೆ ಬರಲಿರುವ ಆರೋಗ್ಯ ಕಾರ್ಯಕರ್ತರಲ್ಲಿ ಮಕ್ಕಳಿಗೆ ಲಸಿಕೆ ಹಾಕಿಸಬೇಕು. ಈ ಹಿಂದೆ ಎಷ್ಟೇ ಬಾರಿ ಲಸಿಕೆ ಕೊಡಿಸಿದ್ದರೂ ಸಹ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ತಪ್ಪದೇ ಲಸಿಕೆ ಕೊಡಿಸಬೇಕು ಎಂದು ಡಾ. ಎಸ್. ಚಿದಂಬರ ಅವರು ಹೇಳಿದರು.

Leave a Reply

Your email address will not be published. Required fields are marked *

error: Content is protected !!