Headlines

ಸಂಪುಟಕ್ಕೆ ಸರ್ಜರಿ ಫಿಕ್ಸ್? 50% ಸಚಿವರಿಗೆ ಗೇಟ್‌ಪಾಸ್‌ ಸಾಧ್ಯತೆ!

ಹುಬ್ಬಳ್ಳಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಯಾವುದೇ ಪ್ರಸ್ತಾಪವಿಲ್ಲ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಸ್ಪಷ್ಟಪಡಿಸಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಸುಭದ್ರವಾಗಿದೆ. ಈ ಬಗ್ಗೆ ಹೈಕಮಾಂಡ್ ಈಗಾಗಲೇ ಸ್ಪಷ್ಟ ಸೂಚನೆ ನೀಡಿದ್ದು, ಅನಗತ್ಯ ಗೊಂದಲಗಳಿಗೆ ಅವಕಾಶವಿಲ್ಲ ಎಂದರು.

​ಸಚಿವ ಸಂಪುಟ ವಿಸ್ತರಣೆಯ ಕುರಿತು ಮಾತನಾಡಿದ ಅವರು, ಮೇ 20ರೊಳಗೆ ಸಂಪುಟ ಪುನಾರಚನೆಯಾಗುವ ವಿಶ್ವಾಸವಿದೆ. ಉಪ ಚುನಾವಣೆಗಳ ಫಲಿತಾಂಶ ಮೇ 4ರಂದು ಪ್ರಕಟವಾಗಲಿದ್ದು, ಆನಂತರ ಹೈಕಮಾಂಡ್ ಮಟ್ಟದಲ್ಲಿ ಈ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ. ಹಿರಿಯ ಶಾಸಕರು ಈಗಾಗಲೇ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಸದ್ಯದ ಶೇ.50 ರಷ್ಟು ಸಚಿವರನ್ನು ಪಕ್ಷದ ಸಂಘಟನಾ ಕೆಲಸಕ್ಕೆ ನಿಯೋಜಿಸಿ, ಹೊಸ ಮುಖಗಳಿಗೆ ಸಂಪುಟದಲ್ಲಿ ಅವಕಾಶ ನೀಡಬೇಕೆಂಬ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

​ಸಿಎಂ ಸಿದ್ದರಾಮಯ್ಯ ಅವರಿಗೆ ಎಲ್ಲರೂ ಆಪ್ತರು. ಶಾಸಕರ ಸಭೆ ಅಥವಾ ಮಂತ್ರಿ ಮಂಡಲದ ಸಭೆ ನಡೆಯುವುದು ಆಡಳಿತಾತ್ಮಕ ಪ್ರಕ್ರಿಯೆ, ಇದಕ್ಕೆ ವಿಶೇಷ ರಾಜಕೀಯ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಅವರು ಪ್ರತಿಪಾದಿಸಿದರು. ಪಕ್ಷದ ಶಿಸ್ತಿನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಸಚಿವ ಜಮೀರ್ ಅಹ್ಮದ್ ಅವರ ಒತ್ತಾಯಕ್ಕೆ ಬೆಂಬಲ ಸೂಚಿಸಿದರು. ಶಿಸ್ತು ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸುವುದು ಅನಿವಾರ್ಯ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

Leave a Reply

Your email address will not be published. Required fields are marked *

error: Content is protected !!