ದೆಹಲಿ, ಸೆ.22 : ದೇಶಾದ್ಯಂತ ಮತಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿಗೊಳಿಸಲು ಕೇಂದ್ರ ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದೆ. ಇದರ ಅಂಗವಾಗಿ ರಾಜ್ಯಗಳ ಚುನಾವಣಾ ಅಧಿಕಾರಿಗಳಿಗೆ ಸೆಪ್ಟೆಂಬರ್ 30ರೊಳಗೆ ಎಲ್ಲಾ ಪೂರ್ವ ಸಿದ್ಧತೆಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ.
ಈಗಾಗಲೇ ಸೆಪ್ಟೆಂಬರ್ ಮೊದಲ ವಾರದಲ್ಲಿ ಆಯೋಗದ ಉನ್ನತ ಅಧಿಕಾರಿಗಳು ವಿವಿಧ ರಾಜ್ಯಗಳ ಚುನಾವಣಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಿದ್ದರು. ಅಲ್ಲಿ, ಮುಂದಿನ 10ರಿಂದ 15 ದಿನಗಳಲ್ಲಿ ಎಸ್‌ಐಆರ್‌ಗೆ ಸಿದ್ಧರಾಗಬೇಕೆಂದು ಮುಖ್ಯ ಚುನಾವಣಾ ಆಯುಕ್ತರು ಸೂಚಿಸಿದ್ದರು. ಇದೀಗ ಅಂತಿಮ ಗಡುವನ್ನು ಸೆಪ್ಟೆಂಬರ್ 30 ಎಂದು ನಿಗದಿಪಡಿಸಲಾಗಿದೆ.
ಈ ಕ್ರಮದಿಂದ ಬಿಹಾರದಲ್ಲಿ ಈ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ ಹಾಗೂ ಮುಂದಿನ ವರ್ಷ ಅಸ್ಸಾಂ, ಕೇರಳ, ಪುದುಚೆರಿ, ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳ ಚುನಾವಣೆಗೆ ಮುನ್ನ ಮತಪಟ್ಟಿ ಪರಿಷ್ಕರಣೆ ನಡೆಯಲಿದೆ. ಕೆಲ ರಾಜ್ಯಗಳು ಈಗಾಗಲೇ ಪರಿಷ್ಕೃತ ಮತದಾರರ ಪಟ್ಟಿಯನ್ನು ತಮ್ಮ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊನೆಯ ಬಾರಿಗೆ 2008ರಲ್ಲಿ ಎಸ್‌ಐಆರ್ ಜಾರಿಗೊಂಡಿತ್ತು.

